ಮಂಗಳೂರು:ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಂಗಳೂರು ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನೆ ಇವರ ಸಂಯುಕ್ತ ಆಶ್ರಯದಲ್ಲಿ “ಹೆಣ್ಣು ಮಗುವನ್ನು ಉಳಿಸಿ ಹೆಣ್ಣು ಮಗುವನ್ನು ಓದಿಸಿ” ಯೋಜನೆಯಡಿ ತಾಲೂಕು ಮಟ್ಟದ ಹಾಗೂ ಕ್ಷೇತ್ರಮಟ್ಟದ ಸಿಬ್ಬಂದಿಗಳಿಗೆ, ಅಧಿಕಾರಿಗಳಿಗೆ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ತಡೆ ಕಾಯ್ದೆ, ಮಕ್ಕಳ ಮಾರಾಟ ಸಾಗಾಟ ತಡೆ ಕಾಯ್ದೆ ಬಗ್ಗೆ ಒಂದು ದಿನದ ತರಬೇತಿ ಕಾರ್ಯಾಗಾರವನ್ನು ಇತ್ತೀಚೆಗೆ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಸಲಾಯಿತು.
ಮಂಗಳೂರು ತಾಲೂಕು ತಹಶೀಲ್ದಾರರಾದ ಪ್ರಶಾಂತ್ ವಿ. ಪಾಟೀಲ್ ಅವರು ದೀಪ ಬೆಳಗಿಸಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ ನೀಡುತ್ತಾ ಮಾತನಾಡಿ ಹೆಣ್ಣು ಮಗುವಿನ ರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿ ಲಿಂಗ ಪತ್ತೆ ಕಾನೂನಿನ ಪ್ರಕಾರ ಅಪರಾಧವಾಗಿದ್ದು, ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು ಆಗ ಮಾತ್ರ ಸುಸ್ಥಿರ ಸಮಾಜ ನಿರ್ಮಾಣ ಸಾಧ್ಯ ಎಂದರು.
ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೈಲಾ ಕೆ. ಕಾರಿಗಿ ಅವರು ಹೆಣ್ಣು ಮಗುವನ್ನು ಉಳಿಸಿ ಹೆಣ್ಣು ಮಗುವನ್ನು ಓದಿಸಿ” ಯೋಜನೆಯಡಿ ಲಿಂಗ ಪತ್ತೆ ಮತ್ತು ಹೆಣ್ಣು ಭ್ರೂಣ ಹತ್ಯೆ ತಡೆ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ ಬಗ್ಗೆ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದ್ದು, ಪ್ರತಿ ಗ್ರಾಮ ಮಟ್ಟದಲ್ಲಿ ಈ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಮಂಗಳೂರು ತಾಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಮಹೇಶ್ ಅಂಬೆಕಲ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಹೆಣ್ಣು ಮಕ್ಕಳ ಸಬಲೀಕರಣಕ್ಕೆ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮ ಸಹಾಯಕವಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಸುರೇಶ್ ಅಡಿಗ, ಪ್ರಭಾರ ತಾಲೂಕು ಆರೋಗ್ಯಾಧಿಕಾರಿ ಡಾ. ಚಿರಾಗ್, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹರೀಶ ಕೆ., ಸಂಪನ್ಮೂಲ ವ್ಯಕ್ತಿಗಳಾಗಿ ಎ.ಜೆ. ಆಸ್ಪತ್ರೆಯ ಪ್ರೊಫೆಸರ್ ಡಾ. ಅಮೃತ ಭಂಡಾರಿ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವಕೀಲೆ ಗೌರಿ ಮತ್ತಿತರರು ಭಾಗವಹಿಸಿದ್ದರು.
