ಮಂಗಳೂರು: ಸಾರ್ವತ್ರಿಕ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು -ದಕ್ಷಿಣ ಕನ್ನಡ ಜಿಲ್ಲೆಗೆ ಅಭ್ಯರ್ಥಿಗಳ, ರಾಜಕೀಯ ಪಕ್ಷಗಳ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ಇಡಲು ಚುನಾವಣಾ ಲೆಕ್ಕ ವೀಕ್ಷಕರನ್ನು ನಿಯೋಜಿಸಿದೆ.ಐ ಆರ್ ಎಸ್ ಅಧಿಕಾರಿ ಮೆರಗು ಸುರೇಶ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಚುನಾವಣಾ ಲೆಕ್ಕ ವೀಕ್ಷಕರಾಗಿ ಮಾರ್ಚ್ 28ರಂದು ಜಿಲ್ಲೆಗೆ ಆಗಮಿಸಿರುತ್ತಾರೆ.
ಮೆರಗು ಸುರೇಶ್ ಅವರು ಶುಕ್ರವಾರ ಬೆಳಿಗ್ಗೆ ನಗರದ ಜಿಲ್ಲಾ ಚುನಾವಣಾಧಿಕಾರಿಯವರ ಕಚೇರಿಯಲ್ಲಿ ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾ ವಹಿಸಲು ನೇಮಿಸಲಾಗಿರುವ ವಿವಿಧ ತಂಡಗಳ ನೋಡಲ್ ಅಧಿಕಾರಿಗಳನ್ನು ಭೇಟಿ ಮಾಡಿ ಚರ್ಚಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಮಾದರಿ ನೀತಿ ಸಂಹಿತೆಯ ನೋಡಲ್ ಅಧಿಕಾರಿ ಡಾ. ಆನಂದ್ ಕೆ., ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ಜಿಲ್ಲಾ ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ಗೋಕುಲ್ ದಾಸ್ ನಾಯಕ್, ಖರ್ಚು ವೆಚ್ಚಗಳಿಗೆ ಸಂಬಂಧಿಸಿದಂತೆ ನಿಯೋಜಿಸಲಾಗಿದೆ ನೋಡಲ್ ಅಧಿಕಾರಿಗಳು ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಚುನಾವಣಾ ವೆಚ್ಚ ವೀಕ್ಷಕರು ಚುನಾವಣಾ ಸಂಬಂಧ ರಚಿಸಲಾಗಿರುವ ವಿವಿಧ ಸಮಿತಿಗಳ ಕಚೇರಿಗಳನ್ನು ಪರಿಶೀಲಿಸಿದರು. ಈ ವೇಳೆ ಎಂಸಿಎಂಸಿ ಸಮಿತಿಯ ಕಚೇರಿಗೂ ಭೇಟಿ ನೀಡಿದ ಅವರು ಸಮಿತಿಯಲ್ಲಿ ಕೈಗೊಳ್ಳಲಾಗುತ್ತಿರುವ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಕೆಲವು ಸೂಚನೆಗಳನ್ನು ನೀಡಿದರು.