ಮಂಗಳೂರು: ವಿವಿಧ ಸರಕಾರಿ ಇಲಾಖೆಗಳು ಸಾರ್ವಜನಿಕರ ವಿವಿಧ ಅರ್ಜಿ ಮತ್ತು ಅಹವಾಲುಗಳಿಗೆ ತ್ವರಿತವಾಗಿ ಸ್ಪಂದಿಸಿ ಪರಿಹಾರ ಒದಗಿಸಬೇಕೆಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಸೂಚಿಸಿದ್ದಾರೆ.
ಡಿಸೆಂಬರ್ 1ರಿಂದ 3ರವರೆಗೆ ಉಪಲೋಕಾಯುಕ್ತರು ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಅವರು ಜಿಲ್ಲೆಯ ಅಧಿಕಾರಿಗಳೊಂದಿಗೆ ಮಂಗಳವಾರ ಆನ್‍ಲೈನ್ ಮೂಲಕ ಸಭೆ ನಡೆಸಿದರು.
ಪ್ರಮುಖವಾಗಿ ಕಂದಾಯ, ಅರಣ್ಯ, ಆರೋಗ್ಯ, ನಗರಾಡಳಿತ ಮತ್ತು ಪಂಚಾಯತ್‍ರಾಜ್ ಇಲಾಖೆಗಳಿಗೆ ಸಂಬಂಧಿಸಿದ ಸಾರ್ವಜನಿಕರಿಂದ ಹಲವಾರು ದೂರುಗಳು ಬರುತ್ತಿದೆ. ಸಣ್ಣಪುಟ್ಟ ಸೇವೆಗಳಿಗೂ ದೀರ್ಘಕಾಲ ವಿಳಂಬಿಸುವುದು ಸರಿಯಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ಎಲ್ಲಾ ಇಲಾಖೆಗಳು ಸಾರ್ವಜನಿಕರ ಕುಂದುಕೊರತೆಗೆ ಸಂಬಂಧಿಸಿದಂತೆ ಶೀಘ್ರಗತಿಯಲ್ಲಿ ಸ್ಪಂದಿಸಿ ಎಂದು ಉಪಲೋಕಾಯುಕ್ತರು ಸೂಚಿಸಿದರು.
ದಕ್ಷಿಣಕನ್ನಡ ಜಿಲ್ಲಾ ಪ್ರವಾಸ ಸಂದರ್ಭದಲ್ಲಿ ಸಾರ್ವಜನಿಕರ ಅಹವಾಲು ಆಲಿಸಲು ಒಂದು ದಿನ ಸಭೆ ನಿಗದಿಪಡಿಸಲಾಗಿದೆ. ಅಲ್ಲದೆ ವಿವಿಧ ಸರಕಾರಿ ಕಚೇರಿ, ಆಸ್ಪತ್ರೆಗಳಿಗೆ ಭೇಟಿ ನೀಡಲಾಗುವುದು ಎಂದು ಅವರು ಹೇಳಿದರು.
ಉಪ ಲೋಕಾಯುಕ್ತರ ಭೇಟಿಯ ಹಿನ್ನೆಲೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳು, ಕುಂದು ಕೊರತೆಗಳಿದ್ದರೆ ಮಂಗಳೂರು ಲೋಕಾಯುಕ್ತ ಕಚೇರಿಯಲ್ಲಿ ಸಲ್ಲಿಸಬಹುದಾಗಿದೆ. ಈ ದೂರುಗಳನ್ನು ಡಿಸೆಂಬರ್ 2ರಂದು ನಡೆಯುವ ವಿಚಾರಣೆಯಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದು ಹೇಳಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ. ಆನಂದ್ ಕೆ, ಅಪರ ಜಿಲ್ಲಾಧಿಕಾರಿ ಡಾ. ಸಂತೋμïಕುಮಾರ್.ಜಿ, ಪೊಲೀಸ್ ಅಧೀಕ್ಷಕ ಯತೀಶ್, ಉಪ ಪೊಲೀಸ್ ಆಯುಕ್ತ ಸಿದ್ದಾರ್ಥ್ ಗೋಯಲ್, ಲೋಕಾಯುಕ್ತ ಪೊಲೀಸ್ ಅಧೀಕ್ಷಕ ನಟರಾಜ್, ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು