ಮಂಗಳೂರು: ಕಂದಾಯ ಇಲಾಖೆ ಮತ್ತು ವಿಜಯನಗರ ಜಿಲ್ಲಾಡಳಿತದ ವತಿಯಿಂದ ಪ್ರಗತಿಯತ್ತ ಕರ್ನಾಟಕ ಸಮರ್ಪಣೆ ಸಂಕಲ್ಪ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಒಂದು ಲಕ್ಷ ಕುಟುಂಬಗಳಿಗೆ ಕಂದಾಯ ಗ್ರಾಮ ಹಕ್ಕು ಪತ್ರ ಸಮರ್ಪಣೆ ಮಾಡುವುದರೊಂದಿಗೆ ನೆಮ್ಮದಿ ಕಲ್ಪಿಸಲಾಗುತ್ತಿದೆ. ಎರಡು ವರ್ಷಗಳ ಸಾಧನೆಯನ್ನು ನಾಡಿನ ಜನರಿಗೆ ಸಮರ್ಪಣೆ ಮಾಡುವುದರೊಂದಿಗೆ ಮತ್ತಷ್ಟು ಜನಪರ ಸೇವೆಯ ಪ್ರತಿಜ್ಞೆಯನ್ನು ಈ ಸಂದರ್ಭದಲ್ಲಿ ಕೈಗೊಳ್ಳಲಾಗುವುದು.
ಹೊಸಪೇಟೆ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಬೆಳಿಗ್ಗೆ 11 ಗಂಟೆಗೆ ಜರುಗುವ ಕಾರ್ಯಕ್ರಮದಲ್ಲಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರು ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ವಿತರಣೆ ಮಾಡುವರು. ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸಮಾವೇಶದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರದ ಹಣಕಾಸು ಹಾಗೂ ಕಾಪೊ೯ರೇಟ್ ವ್ಯವಹಾರಗಳ ಸಚಿವೆ ನಿರ್ಮಲಾ ಸೀತಾರಾಮನ್, ಬೃಹತ್ ಕೈಗಾರಿಕೆ ಮತ್ತು ಉಕ್ಕು ಇಲಾಖೆ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಮತ್ತು ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ, ಜಲಶಕ್ತಿ ಮತ್ತು ರೈಲ್ವೆ ಸಚಿವ ವಿ.ಸೋಮಣ್ಣ, ಸೂಕ್ಷ್ಮ, ಸಣ್ಣ, ಅತಿ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ವಿಧಾನ ಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣ ಸ್ವಾಮಿ ಭಾಗವಹಿಸಲಿದ್ದಾರೆ. ಲೋಕಸಭೆ ಸಂಸದ ಕೆ.ಸಿ.ವೇಣುಗೋಪಾಲ, ಪ್ರಿಯಾಂಕ ಗಾಂಧಿ ವಾದ್ರ, ರಾಜ್ಯ ಸಭೆ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ, ರಾಜ್ಯ ಸರ್ಕಾರದ ವಸತಿ, ವಕ್ಫ್, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹಾಗೂ ವಿಜಯನಗರ ಕ್ಷೇತ್ರ ಶಾಸಕ ಹೆಚ್.ಆರ್.ಗವಿಯಪ್ಪ ಉಪಸ್ಥಿತರಿರಲಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದು ಮೇ 20 ಕ್ಕೆ ಎರಡು ವರ್ಷ ಪೂರ್ಣಗೊಳ್ಳಲಿದೆ. ಚುನಾವಣೆ ಪ್ರಣಾಳಿಕೆಯಲ್ಲಿ ನೀಡಿದ ವಾಗ್ದಾನದಂತೆ ಸರ್ಕಾರ ರಚನೆ ನಂತರದ ಮೊದಲ ಸಚಿವ ಸಂಪುಟದಲ್ಲಿಯೇ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಾತ್ವಿಕ ಅನುಮೋದನೆ ನೀಡಲಾಗಿತ್ತು. ಹಂತ ಹಂತವಾಗಿ ಐದು ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಿ ದೇಶದ ಇತರೆ ರಾಜ್ಯಗಳಿಗೂ ಮಾದರಿಯಾಗಿದೆ. ಜಾತಿ, ಧರ್ಮ, ಭಾಷೆಯ ಭೇಧವಿಲ್ಲದೆ ನಾಡಿನ ಎಲ್ಲ ಜನರ ಮನೆ ಮನೆಗಳಿಗೆ ಯೋಜನೆಗಳು ತಲುಪಿವೆ. ಪ್ರಗತಿಯತ್ತ ಕರ್ನಾಟಕ ರಾಜ್ಯ ಮುನ್ನೆಡೆದಿದೆ. ಸರ್ಕಾರ ಈ ಐತಿಹಾಸಿಕ ಸಾಧನೆಯನ್ನು ಸ್ಮರಣೀಯವಾಗಿಸುವ ನಿಟ್ಟಿನಲ್ಲಿ ಮೇ.20 ರಂದು ಕರ್ನಾಟಕ ಸಮರ್ಪಣೆ ಸಂಕಲ್ಪ ಎಂಬ ವಿನೂತನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎ೦ದು ಪ್ರಕಟಣೆ ತಿಳಿಸಿದೆ.
