ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಲೋಕಸಭಾ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ ಅವರು ಏ.4ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಅಧಿಕೃತವಾಗಿ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಅವರು ತಿಳಿಸಿದರು.
ಕೊಡಿಯಾಲ್‌ಬೈಲ್‌ನಲ್ಲಿರುವ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು ಏ.4ರಂದು ಬೆಳಗ್ಗೆ ಬಂಟ್ಸ್ ಹಾಸ್ಟೆಲ್ ಪಕ್ಕದಲ್ಲಿರುವ ಲೋಕಸಭೆ ಚುನಾವಣಾ ಕಾರ್ಯಾಲಯದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಾರ್ಯಕರ್ತರು, ಬೆಂಬಲಿಗರು, ಮುಖಂಡರ ಬೃಹತ್ ಮೆರವಣಿಗೆಯೊಂದಿಗೆ ಪಕ್ಷದ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರು ಪಾದಯಾತ್ರೆ ನಡೆಸಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಸಂಖ್ಯೆಯ ಬೆಂಬಲಿಗರು ಪಾಲ್ಗೊಳ್ಳಲಿದ್ದಾರೆ ಎಂದು ಸತೀಶ್ ಕುಂಪಲ ಹೇಳಿದರು.
ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟರ ಜತೆಗೆ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಚುನಾವಣಾ ಸಂಚಾಲಕರಾದ ಸುನಿಲ್ ಕುಮಾರ್, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಜಿಲ್ಲೆಯ 6 ಮಂದಿ ಬಿಜೆಪಿ ಶಾಸಕರು, ವಿಧಾನ ಪರಿಷತ್ ಸದಸ್ಯರು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಅವರು ಈ ನಾಮಪತ್ರ ಸಲ್ಲಿಕೆ ಪಾದಯಾತ್ರೆಯಲ್ಲಿ ಭಾಗವಹಿಸಲಿದ್ದಾರೆ. ನಾಮಪತ್ರ ಸಲ್ಲಿಕೆ ನಂತರ ಮರುದಿನ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಕೂಡ ಜಿಲ್ಲೆಗೆ ಆಗಮಿಸುವ ನಿರೀಕ್ಷೆಯಿದೆ. ಚುನಾವಣಾ ಪ್ರಚಾರಕ್ಕೆ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಹಲವು ಮಂದಿ ನಾಯಕರು ಆಗಮಿಸಲಿದ್ದಾರೆ ಎಂದು ಅವರು ನುಡಿದರು.
ಪಕ್ಷದ ಚುನಾವಣಾ ಸಿದ್ಧತೆ ಬಗ್ಗೆ ಕೆಲವು ವಿವರಗಳನ್ನು ನೀಡಿದ ಅವರು, ವಿಧಾನ ಸಭಾ ಕ್ಷೇತ್ರಗಳ ಪೈಕಿ 9 ಮಂಡಲಗಳಲ್ಲಿ61 ಮಹಾಶಕ್ತಿ ಕೇಂದ್ರದ ಸಂಘಟನಾ ವ್ಯಾಪ್ತಿಯಲ್ಲಿ ಎಲ್ಲ ಕಾರ್ಯಕರ್ತರ ಸಂಪರ್ಕ ಯಶಸ್ವಿಯಾಗಿದೆ. ಈಗಾಗಲೇ 495 ಶಕ್ತಿ ಕೇಂದ್ರಗಳನ್ನು ಯಶಸ್ವಿಯಾಗಿ ಸಂಪರ್ಕ ಮಾಡಿದ್ದೇವೆ. 1876 ಬೂತ್‌ಗಳಲ್ಲಿ ಕೂಡ ಸಭೆಗಳನ್ನು ನಡೆಸುವ ಕಾರ್ಯ ನಡೆಯುತ್ತಿದೆ. ಏಪ್ರಿಲ್ 5ರಿಂದ ಬೂತ್ ಮಟ್ಟದಲ್ಲಿ ಮನೆ-ಮನೆ ಸಂಪರ್ಕ ಅಭಿಯಾನ ವ್ಯಾಪಕವಾಗಿ ಆರಂಭವಾಗಲಿದೆ. ಮೂರು ಹಂತದಲ್ಲಿ ಸಂಪರ್ಕ ಮಾಡುವ ಯೋಜನೆ ಇದೆ. ಏ.21ರಂದು ಮಹಾ ಅಭಿಯಾನ ಮಾಡುವ ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಸತೀಶ್ ಕುಂಪಲ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ಪ್ರಮುಖರು ಹಾಗೂ ಚುನಾವಣಾ ಉಸ್ತುವಾರಿಗಳಾದ ನಿತಿನ್ ಕುಮಾರ್, ಕೋಶಾಧಿಕಾರಿ ಸಂಜಯ್ ಪ್ರಭು, ರವಿಶ೦ಕರ್ ಮಿಜಾರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರೇಮಾನ೦ದ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು