ಮಂಗಳೂರು: ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ ಮತ್ತು ಹಗರಣಗಳ ವಿರುದ್ಧ ನಾಳೆ (ಆ.3) ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಅವರ ನೇತೃತ್ವದಲ್ಲಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ ಕುಮಾರಸ್ವಾಮಿ ಅವರ ಸಹಯೋಗದಲ್ಲಿ ಬೆಂಗಳೂರಿನಿಂದ ಮೈಸೂರು ತನಕ ಪಾದಯಾತ್ರೆ ಪ್ರಾರಂಭವಾಗಲಿದೆ. ಆ.7ರಂದು ಮೈಸೂರು ತಲುಪಲಿರುವ ಪಾದಯಾತ್ರೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿಯ 5,000ಕ್ಕೂ ಹೆಚ್ಚು ಕಾರ್ಯಕರ್ತರು ವಿವಿಧ ಮೋರ್ಚಾಗಳ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದು ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ತಿಳಿಸಿದರು.
ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ಸರಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಸಮರ ಸಾರಿದೆ. ಹೋರಾಟವನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುವ ವರೆಗೂ ಪಕ್ಷವು ಹೋರಾಟದಿಂದ ಹಿಂದೆ ಸರಿಯುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆಯಿಂದ 5,000 ಮಂದಿ ಕಾರ್ಯಕರ್ತರು ಯುವಮೋರ್ಚಾ ನೇತೃತ್ವದಲ್ಲಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಜತೆಗೆ ವಿವಿಧ ಇತರ ಮೋರ್ಚಾಗಳೂ ಈ ಪಾದಯಾತ್ರೆಗೆ ಸಹಯೋಗ ನೀಡಲಿವೆ. 200ಕ್ಕೂ ಹೆಚ್ಚು ಕಾರ್ಯಕರ್ತರ ಒಂದು ತಂಡ ಈಗಾಗಲೇ ಅಲ್ಲಿಗೆ ಹೊರಟಿದೆ ಎಂದು ನುಡಿದರು. ,
ಜಿಲ್ಲೆಯಿಂದ ಜಿಲ್ಲಾಧ್ಯಕ್ಷರು, ಜನಪ್ರತಿನಿಧಿಗಳು ಸೇರಿದಂತೆ ಎಲ್ಲ ಪ್ರಮುಖರು ನಾಳೆ ಬೆಂಗಳೂರಿಗೆ ತೆರಳಿ ಪಾದಯಾತ್ರೆಯಲ್ಲಿ ಸೇರಿಕೊಳ್ಳಲಿದ್ದಾರೆ. 7ನೇ ತಾರೀಕಿನಂದು 2-3 ಸಾವಿರ ಕಾರ್ಯಕರ್ತರು ಒಟ್ಟಿಗೇ ಇಲ್ಲಿಂದ ಹೊರಟು ಪಾದಯಾತ್ರೆಯಲ್ಲಿ ಸೇರಿಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಸತೀಶ್ ಕುಂಪಲ ಮಾಹಿತಿ ನೀಡಿದರು..ಸುದ್ದಿಗೋಷ್ಠಿಯಲ್ಲಿ ಯತೀಶ್ ಅರ್ವಾರ್, ರವೀಂದ್ರ ಶೆಟ್ಟಿ ಉಳಿದೊಟ್ಟು, ಸಂಜಯ್ ಪ್ರಭು, ಮಹೇಶ್ ಜೋಗಿ, ಉಪಸ್ಥಿತರಿದ್ದರು.