ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ವಿಭಾಗ, ರಾಜ್ಯ ರಾಷ್ಟ್ರೀಯ ಸೇವಾ ಯೋಜನಾ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಹಭಾಗಿತ್ವದಲ್ಲಿ “ರಾಷ್ಟ್ರೀಯ ಭಾವೈಕ್ಯತಾ ಶಿಬಿರ” ಆಗಸ್ಟ್ 6ರಿಂದ 12 ರವರೆಗೆ ಮೂಡಬಿದ್ರೆಯ ಮಹಾವೀರ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ.
ಶಿಬಿರದ ಉದ್ಘಾಟನೆ ಅಗಸ್ಟ್ 6ರಂದು ಸಂಜೆ 4 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯ ಉಪಕುಲಪತಿ ಪ್ರೋ. ಪಿ.ಎಲ್ ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಮರೋಪ ಸಮಾರಂಭವು ಆಗಸ್ಟ್ 12ರಂದು ಸೋಮವಾರ ಬೆಳಗ್ಗೆ 11 ಗಂಟೆಗೆ ನಡೆಯಲಿದೆ. ಈ ಶಿಬಿರದಲ್ಲಿ ಐದು ರಾಜ್ಯಗಳಿಂದ 55 ಮಂದಿ ಮತ್ತು ಕರ್ನಾಟಕ ರಾಜ್ಯದಿಂದ 95 ಮಂದಿ ಒಟ್ಟು 150 ರಾಷ್ಟ್ರೀಯ ಸೇವಾ ಯೋಜನೆಯ ಶಿಬಿರಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮ ಸಂಯೋಜನಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.