ಮಂಗಳೂರು: ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ‘ನವಯುಗ-ನವಪಥ’ ಹೆಸರಿನ ತಮ್ಮ ಪ್ರಣಾಳಿಕೆಯನ್ನು ಮಂಗಳವಾರ ಬಿಡುಗಡೆ ಮಾಡಿದರು.
ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಆಯೋಜಿಸಿದ ಸಮಾರಂಭದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್ ಹಾಗೂ ತಮಿಳುನಾಡು ಬಿಜೆಪಿ ಅಧ್ಯಕ್ಷರಾದ ಅಣ್ಣಾಮಲೈ ಅವರು ಕ್ಯಾಪ್ಟನ್ ಬ್ರಿಜೇಶ್ ಚೌಟರ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಸಂಪರ್ಕ, ಮೂಲಸೌಕರ್ಯ ಅಭಿವೃದ್ಧಿಯಲ್ಲಿ ದಾಪುಗಾಲು, ಕೈಗಾರಿಕೆ ಮತ್ತು ಬಂಡವಾಳ ಆಕರ್ಷಣೆ, ಸ್ಟಾರ್ಟ್ ಅಪ್ ಮತ್ತು ಉದ್ಯಮಶೀಲತೆ, ಪ್ರವಾಸೋದ್ಯಮ, ನಾರಿಶಕ್ತಿ, ಸಂಸ್ಕೃತಿ ಹಾಗೂ ಪರಂಪರೆ; ಕೃಷಿ, ಪಶುಸಂಗೋಪನೆ, ಮೀನುಗಾರಿಕೆ; ಯುವಜನತೆ ಮತ್ತು ಸಂವಹನ, ಕರಾವಳಿ ಅಭಿವೃದ್ಧಿ ಮತ್ತು ಭದ್ರತೆ- ಹೀಗೆ 9 ವಿಷಯಗಳನ್ನು ಒಳಗೊಂಡ ಕಾರ್ಯಸೂಚಿ ಈ ಪ್ರಣಾಳಿಕೆಯಲ್ಲಿದೆ.
ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಮಾತನಾಡಿ ಇದೊಂದು ಟಾಸ್ಕ್ ಶೀಟ್ ಅಥವಾ ಕಾರ್ಯಸೂಚಿ. 9 ಫೋಕಸ್ ಏರಿಯಾಗಳನ್ನು ಮುಂದಿಟ್ಟು 2047ರ ವೇಳೆಗೆ ವಿಕಸಿತ ಭಾರತವನ್ನು ರೂಪಿಸುವ ಪ್ರಧಾನಿ ನರೇಂದ್ರ ಮೋದಿಯವರ ಕಲ್ಪನೆಗೆ ಪೂರಕವಾಗಿ ವಿಕಸಿತ ‘ದಕ್ಷಿಣ ಕನ್ನಡ’ವನ್ನು ಸಾಕಾರಗೊಳಿಸಲು ಈ ಕಾರ್ಯಸೂಚಿಯನ್ನು ಸಿದ್ಧಪಡಿಸಲಾಗಿದೆ ಎಂದರು.
ನಮ್ಮ ಮೊಟ್ಟಮೊದಲ ಆದ್ಯತೆ ಇರುವುದು ಪ್ರಧಾನಿ ನರೇಂದ್ರ ಮೋದಿ ಅವರ ಕಳೆದ 10 ವರ್ಷದ ಅವಧಿಯಲ್ಲಿ ನಮ್ಮ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರು ಈ ಜಿಲ್ಲೆಯಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಆಗಿದ್ದು, ಮತ್ತೆ ಕೆಲವು ಪ್ರಗತಿಯಲ್ಲಿವೆ. ಅವುಗಳ ವೇಗವನ್ನು ಮತ್ತಷ್ಟು ಹೆಚ್ಚಿಸಿ ಪೂರ್ಣಗೊಳಿಸುವುದರ ಜತೆಗೆ ಇನ್ನಷ್ಟು ಅಭಿವೃದ್ಧಿಯನ್ನು ಸಾಧಿಸುವುದು ಈ ಕಾರ್ಯಸೂಚಿಯ ಉದ್ದೇಶವಾಗಿದೆ ಎಂದು ಕ್ಯಾಪ್ಟನ್ ಚೌಟ ಹೇಳಿದರು.
ದ.ಕ ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ ಭರತ್ ಶೆಟ್ಟಿ, ರಾಜೇಶ್ ನಾಯಕ್, ಚುನಾವಣೆ ಪ್ರಭಾರಿ ಕ್ಯಾ. ಗಣೇಶ್ ಕಾರ್ಣಿಕ್, ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು, ಪಕ್ಷದ ಹಿರಿಯ ಮುಖಂಡರಾದ ಮೋನಪ್ಪ ಭಂಡಾರಿ, ಮಾಜಿ ಶಾಸಕರಾದ ಸಂಜೀವ ಮಠಂದೂರು, ಬಿ. ನಾಗರಾಜ ಶೆಟ್ಟಿ ಸೇರಿದಂತೆ ಹಲವು ಪ್ರಮುಖರಿದ್ದರು.