ಮಂಗಳೂರು: ದ.ಕ.ಜಿಲ್ಲಾ ಕಾಂಗ್ರೆಸ್ ಮಾಸಿಕ ಸಭೆ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ಮಂಗಳವಾರ ನಡೆಯಿತು,
ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, “ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ತಳಮಟ್ಟದಿಂದ ಪುನರ್ ಸಂಘಟಿಸುವ ನಿಟ್ಟಿನಲ್ಲಿ ಕೆಪಿಸಿಸಿ ಸುತ್ತೋಲೆಗಳನ್ನು ಹೊರಡಿಸಿದ್ದು, ಅವುಗಳನ್ನುಕಟ್ಟುನಿಟ್ಟಾಗಿ ಬ್ಲಾಕ್ ಮಟ್ಟದಲ್ಲಿ ಅನುಷ್ಠಾನಗೊಳಿಸಬೇಕು” ಎಂದು ಕರೆ ನೀಡಿದರು.
“ಪ್ರಜಾಪ್ರಭುತ್ವದ ಮೇಲೆ ಸರ್ವಾಧಿಕಾರ, ದ್ವೇಷ ರಾಜಕಾರಣದ ನೆರಳು ಬೀಳುತ್ತಿರುವ ಸಂದರ್ಭದಲ್ಲಿ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿ ಅವರು ಲೋಕಸಭೆಯ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿರುವುದು ಸಂತಸ ತಂದಿದೆ. ಅವರು ಜನಸಾಮಾನ್ಯರ ನಾಯಕರಾಗಿ ದೇಶಕ್ಕೆ ಉನ್ನತ ನಾಯಕತ್ವ ನೀಡುವಲ್ಲಿ ಯಶಸ್ವಿಯಾಗಲಿ” ಎಂದು ಹಾರೈಸಿದರು.
ಈ ವೇಳೆ ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾದ ರಾಹುಲ್ ಗಾಂಧಿ ಅವರಿಗೆ ಜಿಲ್ಲಾ ಸಮಿತಿಯಿಂದಅಭಿನಂದಿಸಲಾಯಿತು. ಲೋಕಸಭಾ ಚುನಾವಣೆ ಸೋಲಿನ ಬಗ್ಗೆ ಪರಾಮರ್ಶಿಸಲಾಯಿತು. ಬ್ಲಾಕ್ ಮಟ್ಟದಲ್ಲಿ ಪಕ್ಷದ ಸಂಘಟನೆ ಮತ್ತು ಕಾರ್ಯಕ್ರಮ ಅನುಷ್ಠಾನಗೊಳಿಸಲು ಬ್ಲಾಕ್ ಸಂಯೋಜಕರನ್ನು ನೇಮಿಸಲಾಯಿತು. ಬಿಜೆಪಿಯಜನವಿರೋಧಿ ನೀತಿಗಳ ವಿರುದ್ಧ ಕಾರ್ಯಕ್ರಮ ನಡೆಸುವುದು, ಮುಂಬರುವ ಸ್ಥಳೀಯಾಡಳಿತ ಚುನಾವಣೆಗೆ ಸಿದ್ಧತೆ,ಕೆಪಿಸಿಸಿ ಅಧ್ಯಕ್ಷರ ಸೂಚನೆ ಮೇರೆಗೆ ಪಕ್ಷ ವಿರೋಧಿ ಚಟುವಟಿಕೆ ನಡೆಸುವವರ ವಿರುದ್ಧ ಶಿಸ್ತುಕ್ರಮಕೈಗೊಳ್ಳುವುದಾಗಿ ನಿರ್ಣಯಿಸಲಾಯಿತು.
ಶಾಸಕ ಅಶೋಕ್ ಕುಮಾರ್ ರೈ, ಲೋಕಸಭಾ ಅಭ್ಯರ್ಥಿ ಪದ್ಮರಾಜ್ ಪೂಜಾರಿ, ಕೆಪಿಸಿಸಿ ಪ್ರಧಾನಕಾರ್ಯದರ್ಶಿ ಇನಾಯತ್ ಅಲಿ, ಮುಖಂಡರಾದ ಇಬ್ರಾಹೀಂ ಕೋಡಿಜಾಲ್, ಸದಾಶಿವ್ ಉಳ್ಳಾಲ್, ಶಶಿಧರ್ ಹೆಗ್ಡೆಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಜಿಲ್ಲಾ ಮುಂಚೂಣಿ ಘಟಕಾಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು,ಕೆಪಿಸಿಸಿ ಸದಸ್ಯರು, ಮ.ನ.ಪಾ ಸದಸ್ಯರು, ವಕ್ತಾರರು ಉಪಸ್ಥಿತರಿದ್ದರು.
ಸಭೆ ಆರಂಭಕ್ಕೂ ಮುನ್ನ ಇತ್ತೀಚಿಗೆ ಅಗಲಿದ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿಗೆ ಸಂತಾಪ ಸೂಚಿಸಲಾಯಿತು.