ಮಂಗಳೂರು:ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರು ಬುಧವಾರ ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಖುದ್ದು ವೀಕ್ಷಿಸಿ ಪರಿಶೀಲನೆ ಮಾಡಿದರು.
ಬಿ.ಸಿ.ರೋಡ್ ನಿಂದ ಅಡ್ಡಹೊಳೆವರೆಗೆ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ವಿವಿಧ ಸ್ಥಳಗಳಿಗೆ ಆಗಮಿಸಿದ ಅವರು ಕಾಮಗಾರಿಗಳನ್ನು ವೀಕ್ಷಿಸಿ ಮಾಹಿತಿ ಪಡೆದರು. ಬಿ.ಸಿ.ರೋಡ್, ಕಲ್ಲಡ್ಕ, ಉಪ್ಪಿನಂಗಡಿ, ನೆಲ್ಯಾಡಿ, ಪೆರಿಯಶಾಂತಿ, ಅಡ್ಡಹೊಳೆ ಮತ್ತಿತರ ಸ್ಥಳಗಳಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಿದರು.
ಮುಂಬರುವ ಮಳೆಗಾಲದ ಒಳಗೆ ಭಾಗಶಃ ಕಾಮಗಾರಿಗಳನ್ನು ಮುಗಿಸುವಂತೆ ಸೂಚಿಸಿದ ಅವರು, ಸ್ಥಳೀಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿಗಳನ್ನು ನಿರ್ವಹಿಸುವಂತೆ ಸೂಚಿಸಿದರು. ಸರ್ವೀಸ್ ರಸ್ತೆ, ಚರಂಡಿ ಮತ್ತಿತರ ಕಾಮಗಾರಿಗಳಿಗೂ ಆದ್ಯತೆ ನೀಡಲು ಜಿಲ್ಲಾಧಿಕಾರಿಗಳು ತಿಳಿಸಿದರು.ಇದೇ ಸಂದರ್ಭದಲ್ಲಿ ವಿವಿದೆಡೆ ಸಾರ್ವಜನಿಕರು ಹೆದ್ದಾರಿ ಕಾಮಗಾರಿ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ, ಅಹವಾಲು ಸಲ್ಲಿಸಿದರು.ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕ ಅಬ್ದುಲ್ಲಾ ಜಾವೇದ್ ಅಝ್ಮಿ, ತಹಶೀಲ್ದಾರ್ ಗಳು ಉಪಸ್ಥಿತರಿದ್ದರು.