ಮಂಗಳೂರು: ನಿವೇಶನ ಮತ್ತು ವಸತಿ ರಹಿತರಿಗೆ ಕಾನೂನು ರೀತಿಯಲ್ಲಿ ನಿವೇಶನ ಒದಗಿಸಲು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಆದ್ಯತೆ ಮತ್ತು ಎಲ್ಲಾ ರೀತಿಯ ನೆರವು ನೀಡುವುದಾಗಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ್ ಹೇಳಿದರು.
ಅವರು ಮಂಗಳೂರು ಪತ್ರಿಕಾ ಭವನದಲ್ಲಿ ಮಂಗಳವಾರ ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘ ದ ಸದಸ್ಯರಿಗೆ ಷೇರು ಪತ್ರ ವಿತರಿಸಿ ಮಾತನಾಡಿದರು.
ಮೂಡಾ ಕಚೇರಿಯಲ್ಲಿ ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದಲ್ಲಿ ನೇರವಾಗಿ ನನ್ನ ಗಮನಕ್ಕೆ ತರಬಹುದಾಗಿದೆ. ಅದನ್ನು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು.ಪತ್ರಕರ್ತರು ಶ್ರಮ ಜೀವಿಗಳಾಗಿದ್ದು, ಅವರ ನಿವೇಶನ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಪೂರಕ ವಾಗಿ ಸ್ಪಂದಿಸಲಾಗುವುದು ಎಂದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಮಾಜಿ ರೋಟರಿ ಗವರ್ನರ್, ಉದ್ಯಮಿ ಹಾಗೂ ಸಮಾಜ ಸೇವಕ ಪ್ರಕಾಶ್ ಕಾರಂತ್ ಮಾತನಾಡಿ ನಾನು ಹಲವಾರು ಸಂಘ ಸಂಸ್ಥೆಗಳ ಸಾಮಾಜಿಕ ಸೇವೆಯನ್ನು ಗುರುತಿಸಿ ಅವರಿಗೆ ನಿವೇಶನಗಳನ್ನು ನೀಡಿದ್ದೇನೆ. ಆರ್ಥಿಕವಾಗಿ ಹಿಂದುಳಿದ ಹಿರಿಯ ಪತ್ರಕರ್ತರಿಗೂ ಸಹಕಾರಿ ಸಂಘದ ಮೂಲಕ ನಿವೇಶನ ನೀಡಲು ಸಹಕರಿ ಸುವುದಾಗಿ ಅವರು ತಿಳಿಸಿದರು.
ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅರ್ಹ ಪತ್ರಕರ್ತರಿಗೆ ಸರಕಾರದ ನೆರವಿನಿಂದ ಸಹಕಾರ ಸಂಘದ ಮೂಲಕ ನಿವೇಶನವನ್ನು ಪಡೆಯಲು ಪ್ರಯತ್ನಿಸುವುದಾಗಿ ಹೇಳಿದರು.
ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ ಬಿ ಹರೀಶ್ ರೈ, ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪಾಂಡುರಂಗ ಆಚಾರ್ಯ ಉಪಸ್ಥಿತರಿದ್ದರು. ಸಹಕಾರ ಸಂಘದ ನಿರ್ದೇಶಕ ಪುಷ್ಪರಾಜ್ ಬಿ.ಎನ್. ವಂದಿ ಸಿದರು. ಉಪಾಧ್ಯಕ್ಷ ಭಾಸ್ಕರ್ ರೈ ಕಾರ್ಯಕ್ರಮ ನಿರೂಪಿಸಿದರು.