16.7 C
Karnataka
Saturday, November 23, 2024

ಬೃಹತ್ ಪ್ರಮಾಣದಲ್ಲಿ ಸಾಗಾಟ ಮಾಡುತ್ತಿದ್ದ 28 ಲಕ್ಷ ಮೌಲ್ಯದ ಗಾಂಜಾ ವಶ; ಇಬ್ಬರು ಆರೋಪಿಗಳ ಸೆರೆ

ಮಂಗಳೂರು : ಒರಿಸ್ಸಾ ರಾಜ್ಯದಿಂದ ಮಂಗಳೂರು ನಗರ ಹಾಗೂ ಕೇರಳ ರಾಜ್ಯಕ್ಕೆ ಬೃಹತ್ ಪ್ರಮಾಣದಲ್ಲಿ ಮಹೇಂದ್ರ ಬೊಲೆರೋ ವಾಹನದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾಗಾಟ ಮಾಡುತ್ತಿದ್ದವರನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 120 ಕೆ ಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿರುತ್ತಾರೆ.

ಜ.6 ರಂದು ಮಂಗಳೂರು ನಗರಕ್ಕೆ ಒರಿಸ್ಸಾ ರಾಜ್ಯದಿಂದ ಮಹೇಂದ್ರ ಬೊಲೆರೋ ವಾಹನದಲ್ಲಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಇನ್ಸ್ ಪೆಕ್ಟರ್ ಶ್ಯಾಮ್ ಸುಂದರ್ ಹೆಚ್ ಎಂ ನೇತೃತ್ವದ ಸಿಸಿಬಿ ಪೊಲೀಸರು ಉಳ್ಳಾಲ ತಾಲೂಕು ತಲಪಾಡಿ ಗ್ರಾಮದ ಪಿಲಿಕೂರು ಎಂಬಲ್ಲಿ ಪತ್ತೆ ಹಚ್ಚಿ ವಾಹನದಲ್ಲಿ ಅಕ್ರಮವಾಗಿ ಗಾಂಜಾವನ್ನು ಸಾಗಾಟ ಮಾಡುತ್ತಿದ್ದ ಕೇರಳದ ವಯನಾಡು ಜಿಲ್ಲೆಯ ವೈತಿರಿ ಚೂರಮಲದ ಅನೂಪ್ ಎಂ.ಎಸ್(28) ಹಾಗೂ ಕಣ್ಣೂರು ಜಿಲ್ಲೆಯ ಇರಿಟ್ಟಿ ತಾಲೂಕು ಪಡಿಯೂರುನ ಲತೀಪ್ ಕೆ.ವಿ(36), ಎಂಬವರನ್ನು ವಶಕ್ಕೆ ಪಡೆದುಕೊಂಡರು. ಆರೋಪಿಗಳ ವಶದಲ್ಲಿದ್ದ ಸಿಲ್ವರ್ ಬಣ್ಣದ ಮಹೇಂದ್ರ ಬೊಲೆರೋ ಕಾರು

ಸ್ವಾಧೀನಪಡಿಸಿಕೊಂಡು ಅದರಲ್ಲಿ ಸಾಗಾಟ ಮಾಡುತ್ತಿದ್ದ ರೂ. 28 ಲಕ್ಷ ರೂ. ಮೌಲ್ಯದ 120 ಕೆಜಿ ಗಾಂಜಾ, 3 ಮೊಬೈಲ್ ಫೋನ್ ಗಳನ್ನು, 4020 ನಗದು ರೂ. ಸ್ವಾಧೀನಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಗಾಂಜಾ, ಮಹೇಂದ್ರ ಬೊಲೆರೋ ಜೀಪು, ಮೊಬೈಲ್

ಫೋನ್ ಗಳ ಒಟ್ಟು ಮೌಲ್ಯ ರೂ. 35,14,520/- ಆಗಿರುತ್ತದೆ. ಆರೋಪಿಗಳು ಒರಿಸ್ಸಾದಿಂದ ಅಂಧ್ರಪ್ರದೇಶ, ಬೆಂಗಳೂರು ಮೂಲಕ ಗಾಂಜಾವನ್ನು ಕಾರಿನಲ್ಲಿರಿಸಿ ಸಾಗಾಟ ಮಾಡುತ್ತಿದ್ದರು. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
ಆರೋಪಿಗಳಿಬ್ಬರೂ ಕೇರಳದ ರಾಜ್ಯದವರಾಗಿದ್ದು, ಒರಿಸ್ಸಾ ರಾಜ್ಯದಿಂದ ಗಾಂಜಾವನ್ನು ಖರೀದಿಸಿಕೊಂಡು ಮಂಗಳೂರು ನಗರಕ್ಕೆ ಹಾಗೂ ಕೇರಳಕ್ಕೆ ಸಾಗಾಟ ಮಾಡಿ ಮಾರಾಟ ಮಾಡುತ್ತಿದ್ದರು. ಗಾಂಜಾವನ್ನು ಕಳ್ಳ ಸಾಗಾಣಿಕೆ ಮಾಡುವ ಉದ್ದೇಶದಿಂದಲೇ ಆರೋಪಿಗಳು ಬೋಲೆರೋ ವಾಹನದ ಹಿಂಬದಿಯ ಡಿಕ್ಕಿಯಲ್ಲಿ ಪ್ರತ್ಯೇಕವಾದ ಒಂದು ಕಬ್ಬಿಣದ ಬಾಕ್ಸ್ ನ್ನು ಮಾಡಿಕೊಂಡು ಈ ಬಾಕ್ಸ್ ನಲ್ಲಿ ಗಾಂಜಾವನ್ನು ಬಚ್ಚಿಟ್ಟಿದ್ದರು. ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಬಗ್ಗೆ ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗಾಗಿ ಪೊಲೀಸ್ ಕಸ್ಟಡಿಗೆ ಪಡೆಯಲಾಗುವುದು.
ಆರೋಪಿಗಳ ಪೈಕಿ ಅನೂಪ್ ಎಂಬಾತನ ವಿರುದ್ದ ಈ ಹಿಂದೆ ಮೈಸೂರು ಜಿಲ್ಲೆ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2018 ನೇ ಇಸವಿಯಲ್ಲಿ ದರೋಡೆ ಪ್ರಕರಣವೊಂದು ದಾಖಲಾಗಿರುತ್ತದೆ. ಅಲ್ಲದೇ ಕೇರಳ ರಾಜ್ಯದ ವಯನಾಡು ಜಿಲ್ಲೆಯ ಮೆಪ್ಪಳ್ಳಿ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಸಾಗಾಟಕ್ಕೆ ಸಂಬಂಧಪಟ್ಟಂತೆ ಪ್ರಕರಣ, ವಯನಾಡು ಜಿಲ್ಲೆ ಕಲ್ಪಟ್ಟ ಪೊಲೀಸ್ ಠಾಣೆಯಲ್ಲಿ 2 ದರೋಡೆ ಪ್ರಕರಣ, ಒಂದು ಹಲ್ಲೆ ಪ್ರಕರಣ, ವಯನಾಡು ಜಿಲ್ಲೆಯ ಅಂಬಲವಯಲ್ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣಗಳು ದಾಖಲಾಗಿರುತ್ತದೆ.
ಈ ಬೃಹತ್ ಗಾಂಜಾ ಮಾರಾಟ/ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಪೊಲೀಸ್ ನಿರೀಕ್ಷಕಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐ ಯವರಾದ ರಾಜೇಂದ್ರ ಬಿ, ನರೇಂದ್ರ, ಸುದೀಪ್, ಶರಣಪ್ಪ ಭಂಡಾರಿ ಹಾಗೂ ಎಎಸ್ಐ ಯವರಾದ ಮೋಹನ್ ಕೆ ವಿ, ಶೀನಪ್ಪ ಮತ್ತು ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles