ಮಂಗಳೂರು: ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಉಳ್ಳಾಲದ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಕೊಚ್ಚಿನ್‍ನ ಗೇರು ಮತ್ತು ಕೊಕೋ ಅಭಿವೃದ್ಧಿ ನಿರ್ದೇಶನಾಲಯ, ಹಾಗೂ ಬ್ರಹ್ಮಾವರದ ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಐ.ಸಿ.ಎ.ಆರ್. ಕೃಷಿ ವಿಜ್ಞಾನ ಕೇಂದ್ರ, ದಕ್ಷಿಣ ಕನ್ನಡ ಜಿಲ್ಲೆಯ ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಕೃಷಿಕ ಸಮಾಜ, ಇವರ ಸಂಯುಕ್ತ ಆಶ್ರಯದಲ್ಲಿ “ಗೇರುಮೇಳ ಮತ್ತು ವಿಚಾರ ಸಂಕಿರಣ-2024” ಕಾರ್ಯಕ್ರಮ ಮಾರ್ಚ್ 6ರಂದು ಬುಧವಾರ ಬೆಳಿಗ್ಗೆ 10 ಗಂಟೆಗೆ ಉಳ್ಳಾಲ ಕಾಪಿಕಾಡ್ ನಲ್ಲಿರುವ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರದಲ್ಲಿ ನಡೆಯಲಿದೆ.
ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಂಶೋಧನಾ ನಿರ್ದೇಶಕರಾದ ಡಾ. ಬಿ.ಎಂ. ದುಷ್ಯಂತ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಿಶ್ವವಿದ್ಯಾಲಯದ ಕುಲಪತಿ ಡಾ. ಆರ್.ಸಿ ಜಗದೀಶ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ವಿಶ್ವವಿದ್ಯಾಲಯದ ವಿಸ್ತರಣಾ ನಿರ್ದೇಶಕ ಡಾ. ಕೆ.ಟಿ ಗುರುಮೂರ್ತಿ ಅವರು ಕೃಷಿ ವಸ್ತು ಪ್ರದರ್ಶನ ಉದ್ಘಾಟಿಸಲಿದ್ದಾರೆ. ಕೊಚ್ಚಿನ್ ಗೇರು ಮತ್ತು ಕೋಕೋ ಅಭಿವೃದ್ಧಿ ನಿಗಮದ ಉಪನಿರ್ದೇಶಕ ಡಾ. ದಾದಸಾಹೇಬ್ ದೇಸಾಯಿ ಅವರು ದಿಕ್ಸೂಚಿ ಭಾಷಣದೊಂದಿಗೆ, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಎಸ್.ಡಿ ಸಂಪತ್ ಸಾಮ್ರಾಜ್ಯ ಅವರು ತಾಂತ್ರಿಕ ಕೈಪಿಡಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.