26.5 C
Karnataka
Wednesday, April 16, 2025

ಸ್ಟಾರ್ಟಪ್‍ಗಳಿಗೆ ಉತ್ತೇಜಿಸಲು ಉಸ್ತುವಾರಿ ಕಾರ್ಯದರ್ಶಿಗಳ ಸೂಚನೆ

ಮಂಗಳೂರು: ಉದ್ಯಮ ಕ್ಷೇತ್ರದಲ್ಲಿ ನಾವೀನ್ಯತೆ ತರಲು ಸ್ಟಾರ್ಟಪ್ ಗಳಿಗೆ ಹಣಕಾಸು ಬೆಂಬಲ ನೀಡುವ ವಿವಿಧ ಯೋಜನೆಗಳನ್ನು ಸರಕಾರ ಜಾರಿಗೆ ತಂದಿದ್ದು, ಜಿಲ್ಲೆಯಲ್ಲಿ ಇವುಗಳಿಗೆ ಹೆಚ್ಚು ಮಂದಿಯನ್ನು ಆಕರ್ಷಿಸಲು ಅಗತ್ಯ ಕ್ರಮ ಕೈಗೊಳ್ಳಲು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ತುಳಸಿ ಮದ್ದಿನೇನಿ ಅವರು ಸೂಚಿಸಿದ್ದಾರೆ.
ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಸಾಕಷ್ಟು ವೃತ್ತಿಪರ ಶಿಕ್ಷಣ ಸಂಸ್ಥೆಗಳಿವೆ. ಆದರೂ, ಸ್ಟಾರ್ಟಪ್ ಯೋಜನೆಗಳಿಗೆ ಹೆಚ್ಚಿನ ಬೇಡಿಕೆ ಜಿಲ್ಲೆಯಲ್ಲಿ ಕಂಡುಬಂದಿಲ್ಲ್ಲ. ಈ ನಿಟ್ಟಿನಲ್ಲಿ ಜಿಲ್ಲೆಯ ವೃತ್ತಿಪರ ಶಿಕ್ಷಣ ಸಂಸ್ಥೆಗಳೊಂದಿಗೆ ಸಂಯೋಜಿಸಿ ಸ್ಟಾರ್ಟಪ್ ಯೋಜನೆಗಳ ಬಗ್ಗೆ ಜಾಗೃತಿ ಕಾರ್ಯಕ್ರಮ ನಡೆಸುವಂತೆ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ. ಅವರು ಮಾತನಾಡಿ, ವೃತ್ತಿಪರ ಶಿಕ್ಷಣ ಮುಗಿಸಿದ ವಿದ್ಯಾರ್ಥಿಗಳಿಗೆ ಸ್ಟಾರ್ಟಪ್ ಉದ್ಯಮಗಳಿಗೆ ಉತ್ತೇಜಿಸಲು ಈಗಾಗಲೇ ಇಂಜಿನಿಯರಿಂಗ್ ಕಾಲೇಜುಗಳೊಂದಿಗೆ ಕಾರ್ಯಕ್ರಮ ನಡೆಸಲಾಗುತ್ತಿದೆ. ಈ ನಿಟ್ಟಿನಲ್ಲಿ ಎನ್.ಐ.ಟಿ.ಕೆ. ಸಂಸ್ಥೆಯೊಂದಿಗೆ ತಿಳುವಳಿಕೆ ಒಪ್ಪಂದಕ್ಕೆ ಸಹಿ ಹಾಕಿ, ಎನ್.ಐ.ಟಿ.ಕೆ.ಯನ್ನು ನೋಡಲ್ ಆಗಿ ನೇಮಿಸಲಾಗಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಸ್ಟಾರ್ಟಪ್‍ಗಳು ಬರುವ ಸಾಧ್ಯತೆ ಇದೆ ಎಂದು ತಿಳಿಸಿದರು.
‘ನ್ಯಾಯಾಲಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ’
ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯಗಳಲ್ಲಿ ದಾಖಲಾಗಿರುವ ದಾವೆಗಳಿಗೆ ಸಂಬಂಧಿಸಿದಂತೆ ನ್ಯಾಯಾಲಯದ ಆದೇಶವನ್ನು ಪಾಲಿಸಲು ತ್ವರಿತವಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಹಲವಾರು ಪ್ರಕರಣಗಳಲ್ಲಿ ನ್ಯಾಯಾಲಯಗಳ ಆದೇಶವನ್ನು ಪಾಲಿಸದಿರುವುದರಿಂದ ಸರಕಾರವು ನ್ಯಾಯಾಂಗ ನಿಂದನೆ ಪ್ರಕರಣಗಳನ್ನು ಎದುರಿಸಬೇಕಾದ ಪ್ರಸಂಗಗಳು ಉಂಟಾಗಿವೆ. ಈ ನಿಟ್ಟಿನಲ್ಲಿ ನ್ಯಾಯಾಲಯ ಪ್ರಕರಣಗಳ ಮೇಲ್ವಿಚಾರಣೆ ವ್ಯವಸ್ಥೆ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ತರಬೇತಿ ನೀಡುವಂತೆ ಉಸ್ತುವಾರಿ ಕಾರ್ಯದರ್ಶಿಗಳು ಸೂಚಿಸಿದರು.
ಕಂದಾಯ ಮತ್ತು ಅರಣ್ಯ ಜಮೀನುಗಳ ಬಗ್ಗೆ ದಾಖಲೆಗಳಲ್ಲಿ ಸರಿಯಾದ ನಮೂದು ಮಾಡಲು ಗಮನಹರಿಸಬೇಕು. ಇಲ್ಲದಿದ್ದಲ್ಲಿ ಜಮೀನುಗಳ ದಾಖಲೆ ಬಗ್ಗೆ ತಕರಾರುಗಳು ಉಂಟಾಗುತ್ತಿವೆ. ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕ ಅನುದಾನ ಬಿಡುಗಡೆಗೊಂಡಿದ್ದು, ಎಲ್ಲ ಇಲಾಖೆಗಳು ಮೇ ಅಂತ್ಯದೊಳಗೆ ಕ್ರಿಯಾ ಯೋಜನೆ ತಯಾರಿಸಬೇಕು. ಅನುದಾನವನ್ನು ವರ್ಷಾಂತ್ಯದವರೆಗೂ ಬಳಕೆ ಮಾಡದೆ, ಕೊನೆಯಲ್ಲಿ ತರಾತುರಿಯಲ್ಲಿ ವೆಚ್ಚ ಮಾಡುವ ಪ್ರಸಂಗ ಎದುರಾಗಬಾರದು ಎಂದು ತುಳಸಿ ಮದ್ದಿನೇನಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ. ಆನಂದ್, ಅಪರ ಜಿಲ್ಲಾಧಿಕಾರಿ ಡಾ. ಸಂತೋಷ್ ಕುಮಾರ್, ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

Stay Connected

0FansLike
3,912FollowersFollow
0SubscribersSubscribe

Latest Articles