ಮ೦ಗಳೂರು: ಜರ್ಮನಿಯು ಏಕೀ ಕರಣವಾದ ದಿನ. ಮ್ಯೂನಿಕ್ ನಗರದಲ್ಲಿ ಅಕ್ಟೊಬರ್ ಫೆಸ್ಟ್ ನೋಡಲೆಂದು ಜನಸಾಗರ. ಈಸಂಭ್ರಮದ ಮಧ್ಯವೇ ಇತ್ತಕಡೆಯಲ್ಲಿ ಐನೇವೆಲ್ಟ್ ಹೌಸ್ ನಲ್ಲಿರುವ ಒಂದು ರಂಗಮಂದಿರದಲ್ಲಿ ಜನ ಕಿಕ್ಕಿರಿದು ತುಂಬಿದ್ದರು. ಎಲ್ಲರಲ್ಲೂ ಕಾರ್ಯ ಕ್ರಮದ ಬಗ್ಗೆ ಕುತೂಹಲ. ಯಕ್ಷಧ್ರುವ ಪಟ್ಲ ಫೌಂಡೇಷನ್ ಇದರ ಯುರೋಪ್ ಘಟಕ ಸ್ಥಾಪಿಸಿಔಪಚಾರಿಕವಾಗಿ ಘೋಷಣೆ ಮಾಡುವ ದಿನ.
ಮುಖ್ಯ ಅತಿಥಿಗಳಾಗಿ ಭಾರತೀಯ ರಾಯಭಾರ ಕಚೇರಿಯಲ್ಲಿ ಸಾಂಸ್ಕೃತಿಕ ಅಧಿಕಾರಿಗಳಾಗಿರುವ ರಾಜೀವ್ ಚಿತ್ಕಾರ,ಮ್ಯೂನಿಕ್ ನಗರದ ಎಲ್ಎಂಯೂ ವಿಶ್ವವಿದ್ಯಾ ಲಯ ಇಂಡಾಲಜಿ ವಿಭಾಗದ ಪ್ರಸಿದ್ಧ ನಿವೃತ್ತ ಪ್ರಾಧ್ಯಾಪಕ ಡಾ. ರಾಬರ್ಟ್ ಜೈಡನ್ಬೊಸ್ ಹಾಗೂ ಸನಾತನ ಅಕಾಡಮಿಯ ಶ್ರೀಮತಿ ಅನೂಷಾ ಶಾಸ್ತ್ರಿ , ಸಿರಿಗನ್ನಡಕೂಟ ಮ್ಯೂನಿಕ್ ಅಧ್ಯಕ್ಷ ಶ್ರೀ ಶ್ರೀಧರಲಕ್ಷ್ಮಾಪುರ ಹಾಗೂ ಫ್ರಾಂಕ್ಫರ್ಟ್ ರೈನ್ ಮೈನ್ ಕನ್ನಡ ಸಂಘದ ಅಧ್ಯಕ್ಷ ವೇದಮೂರ್ತಿ ಅವರು ಆಗಮಿಸಿದ್ದರು .ಮುಖ್ಯ ಅತಿಥಿಗಳು ದೀಪ ಹಚ್ಚಿ ಸಾಂಕೇತಿಕವಾಗಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಘಟಕ ಉದ್ಘಾಟನೆ ಮಾಡಿದರು.
. ಯಕ್ಷಧ್ರುವ ಪಟ್ಲ ಫೌಂಡೇಶನ್ ಯುರೋಪ್ ಅಧ್ಯಕ್ಷ ನರೇಂದ್ರ ಶೆಣೈ ಅವರು ಮಾತನಾಡಿ ತಮ್ಮ ಹಲವು ವರ್ಷಗಳ ಮಹಾದಾಶಯ ಇಂದು ಕಾರ್ಯಗತ ಆಯ್ತು, ಬಹಳ ಸಂತಸದ ದಿನ, ಮುಂದಿನ ದಿನಗಳಲ್ಲಿ ಯಕ್ಷಗಾನ ಗುರು ಅಜಿತ್ ಪ್ರಭು ರವರ ಸಾರತ್ಯದಲ್ಲಿ ಯುರೋಪ್ ಆದ್ಯಂತ ಯಕ್ಷಗಾನ ಪ್ರದರ್ಶನ ಹಾಗೂ ಮುಖ್ಯವಾಗಿ ನಮ್ಮ ಮುಂದಿನ ಪೀಳಿಗೆಗೆ ಈ ಕಲೆಯನ್ನು ಧಾರೆ ಎರೆಯುವಕೆಲಸ ಮಾಡಲಿದ್ದೇವೆ ಎಂದು ಹೇಳಿದರು.
ಈ ಸುದಿನದಂದು ಸಂಸ್ಥೆಯ ಕಾರ್ಯದರ್ಶಿ ಹಾಗೂ ಜರ್ಮನಿಯ ಯಕ್ಷಗಾನ ಕಲಾವಿದರು ಮತ್ತು ಗುರು ಅಜೀತ್ ಪ್ರಭು ಕಳೆದ ಒಂದು ವರ್ಷದಿಂದ ಜರ್ಮನಿಯ ಮ್ಯೂನಿಕ್, ಪ್ರಾಂಕ್ಪರ್ಟ್, ನೂರೆನ್ಬರ್ಗ್, ಮತ್ತು ಬೆಲ್ಜಿಯಂ ನ ಬ್ರುಸ್ಸೇಲ್ಸ್ ನಗರಗಳಿಂದ ಯಕ್ಷಗಾನ ಕಲಿಯುತ್ತಿದ್ದ ತಮ್ಮವಿದ್ಯಾರ್ಥಿಗಳೊಡನೆ ಯಕ್ಷಗಾನ ಕಲೆಯನ್ನ ಸಂಪ್ರದಾಯಿಕವಾಗಿ ಪರಿಚಯಿಸುವ ಉದ್ದೇಶದಿಂದ ಯಕ್ಷಗಾನ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ವಿದ್ಯಾರ್ಥಿಗಳು ಸಾಂಪ್ರದಾಯಿಕವಾಗಿ ಹೆಜ್ಜೆ
ಕಲಿತು ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ್ದರು.
ಯಕ್ಷಗಾನ ವಿದ್ಯಾರ್ಥಿಗಳಿಂದ ಕೋಟ ಶಿವರಾಮ ಕಾರಂತರು ಪರಿಚಯಿಸಿದ ಯಕ್ಷಗಾನ ಬ್ಯಾಲೆರೂಪದಲ್ಲಿ ಪ್ರದರ್ಶನಗೊಂಡ ಚಿಕ್ಕ ಮಕ್ಕಳ”ಮಾಯಾಮೃಗ” (ಸೀತಾಪಹರಣ) ಯಕ್ಷಗಾನ ರೂಪಕ ಪ್ರೇಕ್ಷಕರನ್ನ ಮಂತ್ರಮುಗ್ಧ ಗೊಳಿಸಿತು.
ವಿಶೇಷವೆಂದರೆ ಕಾರ್ಯಕ್ರಮ ವೀಕ್ಷಿಸಿದವರಲ್ಲಿ ಶೇಖಡಾ 20 ರಷ್ಟು ಕನ್ನಡೇತರ / ಜರ್ಮನ್ ನಾಗರಿಕರಿದ್ದರು. ಕಾರ್ಯಕ್ರಮದ ವೀಕ್ಷಿಸಿ ಯಕ್ಷಗಾನ ಪ್ರಾತ್ಯಕ್ಷಿಕೆ ಮತ್ತು ಮಕ್ಕಳ ಯಕ್ಷಗಾನಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು ಮತ್ತು ಕಲೆಗಾಗಿ ಕಲಾವಿದರಿಗಾಗಿಯೇ ಪಟ್ಲ ಫೌಂಡೇಶನ್ ಮಾಡುತ್ತಿರುವ ಕೆಲಸವನ್ನ ಶ್ಲಾಘಿಸಿದರು.