ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಡಾ.ಪಿ.ದಯಾನಂದ ಪೈ ಮತ್ತು ಶ್ರೀ ಪಿ.ಸತೀಶ್ ಪೈ ಯಕ್ಷಗಾನ ಅಧ್ಯಯನ ಕೇಂದ್ರದ 2022-23 ನೇ ಸಾಲಿನ ಯಕ್ಷಮಂಗಳ ಪ್ರಶಸ್ತಿಯು ಪ್ರಕಟಗೊಂಡಿದ್ದು, ಯಕ್ಷಮಂಗಳ ಪ್ರಶಸ್ತಿಗೆ ಮಕ್ಕಳ ಮೇಳ ಸಾಲಿಗ್ರಾಮದ ಸಂಚಾಲಕರು, ಹಿರಿಯ ಯಕ್ಷಗಾನ ಕಲಾವಿದ, ಸಂಘಟಕ ಶ್ರೀಧರ ಹಂದೆ ಹಾಗೂ ತೆಂಕು ಮತ್ತು ಬಡಗುತಿಟ್ಟಿನ ಹಿರಿಯ ಸ್ತ್ರೀವೇಷ ಕಲಾವಿದ ಎಂ.ಕೆ.ರಮೇಶ್ ಆಚಾರ್ಯ ಅವರು ಆಯ್ಕೆಯಾಗಿದ್ದಾರೆ. ಯಕ್ಷಮಂಗಳ ಕೃತಿ ಪ್ರಶಸ್ತಿಗೆ ರಾಧಾಕೃಷ್ಣ ಕಲ್ಚಾರ್ ಅವರ ‘ಪೀಠಿಕಾ ಪ್ರಕರಣ’ ಕೃತಿಯು ಆಯ್ಕೆಯಾಗಿದೆ.
ಯಕ್ಷಮಂಗಳ ಪ್ರಶಸ್ತಿಯು 25,000 ನಗದು, ಪ್ರಶಸ್ತಿ ಪತ್ರ, ಸ್ಮರಣಿಕೆ ಮತ್ತು ಸನ್ಮಾನಗಳನ್ನೊಳಗೊಂಡಿದೆ. ಯಕ್ಷಮಂಗಳ ಕೃತಿ ಪ್ರಶಸ್ತಿಯು 10,000 ನಗದು, ಪ್ರಶಸ್ತಿ, ಸ್ಮರಣಿಕೆಗಳನ್ನು ಒಳಗೊಂಡಿದೆ.
ಜಾನಪದ ವಿದ್ವಾಂಸರಾದ ಡಾ.ಕೆ.ಚಿನ್ನಪ್ಪ ಗೌಡ ಅವರ ನೇತೃತ್ವದಲ್ಲಿ ಪ್ರೊ.ಪಾದೆಕಲ್ಲು ವಿಷ್ಣುಭಟ್ , ಯಕ್ಷಗಾನ ಸಂಘಟಕರ ಮುರಲೀ ಕಡೇಕಾರ್ ಹಾಗೂ ಕೇಂದ್ರದ ನಿರ್ದೇಶಕರಾದ ಡಾ.ಧನಂಜಯ ಕುಂಬ್ಳೆ ಅವರನ್ನು ಒಳಗೊಂಡಿರುವ ಆಯ್ಕೆ ಸಮಿತಿಯ ಸಭೆಯಲ್ಲಿ ಈ ಹೆಸರುಗಳನ್ನು ಸರ್ವಾನುಮತದಿಂದ ಶಿಫಾರಸು ಮಾಡಲಾಯಿತು.ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರ ಅಧ್ಯಕ್ಷತೆಯಲ್ಲಿ ನಡೆಯುವ ಸಮಾರಂಭದಲ್ಲಿ ಯಕ್ಷಮಂಗಳ ಪ್ರಶಸ್ತಿ ಪ್ರದಾನ ಮಾಡಲಾಗುವುದು ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.